ನನ್ನ ಪುಟಗಳು

23 ಮೇ 2018

ಶ್ರೀ ರಾಮಾಯಣ ದರ್ಶನಂ: ಶ್ರೀ ವೆಂಕಣ್ಣಯ್ಯನವರಿಗೆ

ಶ್ರೀ ರಾಮಾಯಣ ದರ್ಶನಂ: ಶ್ರೀ ವೆಂಕಣ್ಣಯ್ಯನವರಿಗೆ

ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ
ನಿಮ್ಮ ಸಿರಿಯಡಿಗೊಪ್ಪಿಸಲ್ಕೆ, ಓ ಪ್ರಿಯಗುರುವೆ.
ಕರುಣಿಸಿಂ ನಿಮ್ಮ ಹರಕೆಯ ಬಲದ ಶಿಷ್ಯನಂ,
ಕಾವ್ಯಮಂ ಕೇಳ್ವೊಂದು ಕೃಪೆಗೆ ಕೃತಕೃತ್ಯನಂ
ಧನ್ಯನಂ ಮಾಡಿ. ನೀಮುದಯರವಿಗೈತಂದು
ಕೇಳಲೆಳಸಿದಿರಂದು. ಕಿರುಗವನಗಳನೋದಿ
ಮೆಚ್ಚಿಸಿದೆನನಿತರೊಳೆ ಬೈಗಾಯ್ತು. “ಮತ್ತೊಮ್ಮೆ
ಬರುವೆ. ದಿನವೆಲ್ಲಮುಂ ಕೇಳ್ವೆನೋದುವೆಯಂತೆ ;
ರಾಮಾಯಣಂ ಅದು ವಿರಾಮಾಯಣಂ ಕಣಾ !”
ಎಂದು ಮನೆಗೈದಿದಿರಿ. ಮನೆಗೈದಿದಿರಿ ದಿಟಂ ;           ೧೦
ದಿಟದ ಮನೆಗೈದಿದಿರಿ !
ಇದೊ ಬಂದಿರುವೆನಿಂದು
ಮುಗಿಸಿ ತಂದಿಹೆನಾ ಮಹಾಗಾನಮಂ. ಪಿಂತೆ
ವಾಲ್ಮೀಕಿಯುಲಿದ ಕಥೆಯಾದೊಡಂ, ಕನ್ನಡದಿ
ಬೇರೆ ಕಥೆಯೆಂಬಂತೆ, ಬೇರೆ ಮೈಯಾಂತಂತೆ,
ಮರುವುಟ್ಟುವಡೆದಂತೆ ಮೂಡಿದೀ ಕಾವ್ಯಮಂ
ವಿಶ್ವವಾಣಿಗೆ ಮುಡಿಯ ಮಣಿ ಮಾಡಿಹೆನ್, ನಿಮ್ಮ
ಕೃಪೆಯಿಂದೆ.- ಪೂರ್ವದ ಮಹಾಕವಿಗಳೆಲ್ಲರುಂ
ನೆರೆದ ಸಗ್ಗದ ಸಭೆಗೆ ಪರಿಚಯಿಸಿರೆನ್ನನುಂ :
ಸಂಘಕೆ ಮಹಾಧ್ಯಕ್ಷರಲ್ತೆ ನೀಂ ? ಕಿರಿಯನಾಂ
ಹಿರಿಯರಿಗೆ ಹಾಡುವೆನ್, ಕೇಳ್ವುದಾಶೀರ್ವಾದಂ !        ೨೦
ನುಡಿಯುತಿಹುದಾ ದಿವ್ಯ ಕವಿಸಭೆಗೆ ಗುರುವಾಣಿ, ಕೇಳ್
ಆಲಿಸಾ ಗುರುಕೃಪೆಯ ಶಿಷ್ಯಕೃತಿ ಸಂಕೀರ್ತಿಯಂ :
“ಬಹಿರ್ಘಟನೆಯಂ ಪ್ರತಿಕೃತಿಸುವಾ ಲೌಕಿಕ
ಚರಿತ್ರೆಯಲ್ತಿದು, ಅಲೌಕಿಕ ನಿತ್ಯಸತ್ಯಂಗಳಂ
ಪ್ರತಿಮಿಸುವ ಸತ್ಯಸ್ಯ ಸತ್ಯ ಕಥನಂ ಕಣಾ,
ಶ್ರೀ ಕುವೆಂಪುವ ಸೃಜಿಸಿದೀ ಮಹಾಛಂದಸಿನ
ಮೇರುಕೃತಿ, ಮೇಣ್ ಜಗದ್ಭವ್ಯ ರಾಮಾಯಣಂ !
ಬನ್ನಿಮಾಶೀರ್ವಾದಮಂ ತನ್ನಿಮಾವಿರ್ಭವಿಸಿ
ಅವತರಿಸಿಮೀ ಪುಣ್ಯಕೃತಿಯ ರಸಕೋಶಕ್ಕೆ,
ನಿತ್ಯ ರಾಮಾಯಣದ ಹೇ ದಿವ್ಯ ಚೇತನಗಳಿರ !          ೩೦
ವಾಗರ್ಥ ರಥವೇರಿ, ಭಾವದಗ್ನಿಯ ಪಥಂ
ಬಿಡಿದು ಬನ್ನಿಂ, ಸಚ್ಚಿದಾನಂದ ಪೂಜೆಯಂ
ಸಹೃದಯ ಹೃದಯ ಭಕ್ತಿ ನೈವೇದ್ಯಮಂ ಕೊಂಡು
ಓದುವರ್ಗಾಲಿಪರ್ಗೊಲಿದೀಯೆ ಚಿತ್ಕಾಂತಿಯಂ !
ನಿತ್ಯಶಕ್ತಿಗಳಿಂತು ನೀಂ ಕಥೆಯ ಲೀಲೆಗೆ ನೋಂತು
ರಸರೂಪದಿಂದಿಳಿಯುತೆಮ್ಮೀ ಮನೋಮಯಕೆ,
ಪ್ರಾಣಮಯದೊಳ್ ಚರಿಸುತನ್ನಮಯಕವತರಿಸೆ ;-
ಶ್ರೀ ರಾಮನಾ ಲೋಕದಿಂದವತರಿಸಿ ಬಂದು
ಈ ಲೋಕಸಂಭವೆಯನೆಮ್ಮ ಭೂಜಾತೆಯಂ
ಸೀತೆಯಂ ವರಿಸುತಾಕೆಯ ನೆವದಿ ಮೃಚ್ಛಕ್ತಿಯಂ         ೪೦
ಮರ್ದಿಸುತೆ, ಸಂವರ್ಧಿಸಿರ್ಪವೋಲ್ ಚಿಚ್ಛಕ್ತಿಯಂ;-
ರಾವಣಾವಿದ್ಯೆಯೀ ನಮ್ಮ ಮರ್ತ್ಯಪ್ರಜ್ಞೆ ತಾಂ
ತನ್ನ ತಮದಿಂ ಮುಕ್ತಮಪ್ಪುದು, ದಿಟಂ, ನಿಮ್ಮ
ದೀಪ್ಯ ದೈವೀಪ್ರಜ್ಞೆಯಮೃತ ಗೋಪುರಕೇರ್ವವೋಲ್ !
ಓ ಬನ್ನಿಮವತರಿಸಿಮೀ ಮೃತ್ಕಲಾ ಪ್ರತಿಮೆಯೊಳ್
ಚಿತ್ಕಲಾ ಪ್ರಾಣಂ ಪ್ರತಿಷ್ಠಿತಂ ತಾನಪ್ಪವೋಲ್ !”


***********

1 ಕಾಮೆಂಟ್‌: